ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಕರ್ನಾಟಕ ಸರ್ಕಾರವು 1977ರಲ್ಲಿ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರ ಜನಾಂಗವನ್ನು ಗುರುತಿಸಿ, ಅವರ ಕ್ಷೇಮಾಭಿವೃದ್ಧಿಗಾಗಿ ಪ್ರತ್ಯೇಕವಾದ “ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ” ಯನ್ನು ಸೃಜಿಸಿ ಔದ್ಯೋಗಿಕ ಮೀಸಲಾತಿ ಸೌಲಭ್ಯ ನೀಡಿಕೆಗೆ ಅವಕಾಶ ಕಲ್ಪಿಸಿರುತ್ತದೆ. 1999-2000ರಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಬೇರ್ಪಟ್ಟು ಪ್ರತ್ಯೇಕ ನಿರ್ದೇಶನಾಲಯವನ್ನು ಹೊಂದಿರುತ್ತದೆ.
ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ, ಮತ್ತು ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸಲು ಕರ್ನಾಟಕ ಸರ್ಕಾರವು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಹಿಂದುಳಿದ ವರ್ಗಗಳಿಗೆ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಮತ್ತು ಸರ್ಕಾರಿ ನೇಮಕಾತಿಗಳಲ್ಲಿ ಈ ಕೆಳಕಂಡಂತೆ ಶೇಕಡ 28 ರಷ್ಟು ಮೀಸಲಾತಿ ಸೌಲಭ್ಯವನ್ನು ಕಲ್ಪಿಸಲಾಗಿರುತ್ತದೆ. ಕರ್ನಾಟಕ ಸರ್ಕಾರವು ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ವರ್ಗಗಳು ಮತ್ತು ಇತರೆ ಹಿಂದುಳಿದ ವರ್ಗಗಳ ನೇಮಕಾತಿಗಳಲ್ಲಿ ಮೀಸಲಾತಿ ಜಾರಿಗೆ ತಂದಿದೆ.
ಪ್ರಸ್ತುತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರತ್ಯೇಕ ಆಯುಕ್ತಾಲಯ ಹೊಂದಿದ್ದು, ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ, ಶೈಕ್ಷಣಿಕ ಪ್ರೋತ್ಸಾಹ ಹಾಗೂ ಆರ್ಥಿಕ ನೆರವು ನೀಡಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರಾಜ್ಯವಲಯ ಹಾಗೂ ಜಿಲ್ಲಾ ವಲಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಹಾಗೂ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿರುತ್ತಾರೆ.
ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ನೇಮಕಾತಿಗಳಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಲಾಗಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಲು “ಮಾರ್ಗದರ್ಶನ ಹಾಗೂ ಉದ್ಯೋಗ ಜಾರಿ ಕೋಶವನ್ನು” ಈ ಇಲಾಖೆಯಲ್ಲಿ ಸ್ಥಾಪನೆ ಮಾಡಲಾಗಿದೆ. ಇಲಾಖೆಯ ತನಿಖಾ ತಂಡಗಳು ಕರ್ನಾಟಕ ರಾಜ್ಯ ಸರ್ಕಾರದ ಇಲಾಖೆಗಳ, ನಿಗಮಗಳ, ಸಹಕಾರ ಸಂಸ್ಥೆಗಳ, ಕಂಪನಿಗಳ, ಘೋಷಿತ ಸಂಸ್ಥೆಗಳ, ರಾಜ್ಯ ಸರ್ಕಾರದ ಉದ್ಯಮಗಳ ಹಾಗೂ ಇವುಗಳ ಘಟಕ ಕಛೇರಿಗಳ ಪರಿವೀಕ್ಷಣೆ ನಡೆಸಿ, ಮೀಸಲಾತಿ ಉಲ್ಲಂಘನೆಯಾದಂತಹ ಪ್ರಕರಣಗಳನ್ನು ಗುರುತಿಸಿ, ನಿಯಮಗಳ ಪ್ರಕಾರ ಕ್ರಮ ಜರುಗಿಸಲಾಗುತ್ತಿದೆ.